ಮಾದಕ ದ್ರವ್ಯ ತಡೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಪೆಡ್ಲರ್‌ಗಳ ಪತ್ತೆ, ಪೂರೈಕೆ ಜಾಲ ಧ್ವಂಸಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.
ಎಚ್‌ಐವಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ಕುರಿತು ವಿಶೇಷ ಜಾಗೃತಿ ಶಿಬಿರಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು


ಮಾದಕ ದ್ರವ್ಯ ತಡೆಗೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ
ಪೆಡ್ಲರ್‌ಗಳ ಪತ್ತೆ, ಪೂರೈಕೆ ಜಾಲ ಧ್ವಂಸಕ್ಕೆ ಆದ್ಯತೆ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.
ವಿಜಯ್ ಪ್ರಭಾಸ್ ನ್ಯೂಸ್ ದಾವಣಗೆರೆ, : ಯುವಜನರ ದೈಹಿಕ ಹಾಗೂ ಮಾನಸಿಕ ಆರೋಗ್ಯ ರಕ್ಷಣೆ ಮತ್ತು ಮಾದಕ ದ್ರವ್ಯಗಳ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದ್ದಾರೆ.
ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯ ನಿಯಂತ್ರಣ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಹಾಗೂ ಯುವಜನರು ಮಾದಕ ವ್ಯಸನಕ್ಕೆ ಬಲಿಯಾಗದಂತೆ ಶಿಕ್ಷಣ ಸಂಸ್ಥೆಗಳಲ್ಲಿ ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪಿಯು ಮತ್ತು ಪದವಿ ಕಾಲೇಜುಗಳು ಹಾಗೂ ನಗರ ಪ್ರದೇಶದ ಶಾಲೆಗಳಲ್ಲಿ **‘ಮಾದಕ ದ್ರವ್ಯ ತಡೆ ಮತ್ತು ಜಾಗೃತಿ ಸಮಿತಿ’**ಗಳನ್ನು ರಚಿಸಬೇಕು. ಮಾದಕ ವ್ಯಸನಕ್ಕೆ ಒಳಗಾದ ವಿದ್ಯಾರ್ಥಿಗಳಿಗೆ ಜಿಲ್ಲಾಸ್ಪತ್ರೆಯ ಮನೋವೈದ್ಯಕೀಯ ವಿಭಾಗದ ಮನೋವಿಜ್ಞಾನಿಗಳು ಮತ್ತು ಆಪ್ತಸಲಹೆಗಾರರ ಮೂಲಕ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು.
ವಸತಿನಿಲಯಗಳಲ್ಲಿ ಆಕಸ್ಮಿಕ ತಪಾಸಣೆ
ವಸತಿನಿಲಯಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ವಾರ್ಡನ್‌ಗಳು ಹಾಗೂ ವೈದ್ಯರ ಸಮನ್ವಯದಲ್ಲಿ ನಿಯಮಿತ ಆರೋಗ್ಯ ತಪಾಸಣೆ ನಡೆಸಬೇಕು. ಎಚ್‌ಐವಿ ಸೇರಿದಂತೆ ಸಾಂಕ್ರಾಮಿಕ ರೋಗಗಳ ಕುರಿತು ವಿಶೇಷ ಜಾಗೃತಿ ಶಿಬಿರಗಳನ್ನು ಆಯೋಜಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.
ವಸತಿನಿಲಯಗಳಲ್ಲಿ ಅಶಿಸ್ತಿನ ಚಟುವಟಿಕೆಗಳು ಹಾಗೂ ಮಾದಕ ದ್ರವ್ಯ ಸೇವನೆ ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಪಂಚಾಯತ್ ಸಿಇಒ, ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ಜಂಟಿ ತಂಡದಿಂದ ವಸತಿನಿಲಯಗಳಿಗೆ ಆಕಸ್ಮಿಕ ಭೇಟಿ ನೀಡಿ ರ‍್ಯಾಂಡಮ್ ಡ್ರಗ್ ಟೆಸ್ಟಿಂಗ್ ನಡೆಸಲಾಗುವುದು ಎಂದು ಎಚ್ಚರಿಸಿದರು.
ಅಕ್ರಮ ಮದ್ಯ ಮಾರಾಟಕ್ಕೂ ಕಡಿವಾಣ
ಗ್ರಾಮೀಣ ಪ್ರದೇಶಗಳಲ್ಲಿ ದೇವಸ್ಥಾನಗಳ ನಿಧಿ ಸಂಗ್ರಹದ ನೆಪದಲ್ಲಿ ಅನಧಿಕೃತವಾಗಿ ಹರಾಜು ಕೂಗಿ ಅಕ್ರಮ ಮದ್ಯ ಮಾರಾಟ ಮಾಡುವುದನ್ನು ತಡೆಯಲು ಅಬಕಾರಿ ಮತ್ತು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಹೋಟೆಲ್‌ಗಳು ಹಾಗೂ ವಿವಿಧ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯ ಮತ್ತು ಈಶಾನ್ಯ ರಾಜ್ಯಗಳ ಕಾರ್ಮಿಕರಿಗಾಗಿ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಯೋಜಿಸಿ, ಮಾಲೀಕರಿಗೆ ಸೂಕ್ತ ಮಾರ್ಗಸೂಚಿ ನೀಡಿ ಆರೋಗ್ಯ ಜಾಗೃತಿ ಮೂಡಿಸಬೇಕು ಎಂದರು.
249 NDPS ಪ್ರಕರಣ ದಾಖಲು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ಮಾದಕ ದ್ರವ್ಯಗಳ ದುಷ್ಪರಿಣಾಮಗಳ ಕುರಿತು ಜಾಗೃತಿ ವೀಡಿಯೊಗಳನ್ನು ಪ್ರದರ್ಶಿಸಲಾಗುವುದು. ‘ನಶಾ ಮುಕ್ತ ಭಾರತ್ ಅಭಿಯಾನ’ದಡಿ ವಿಶೇಷ ಜಾಗೃತಿ ಜಾಥಾಗಳನ್ನು ಆಯೋಜಿಸಲಾಗುವುದು ಎಂದರು.
ವಿದ್ಯಾರ್ಥಿಗಳನ್ನು ಶಿಕ್ಷಿಸುವುದಕ್ಕಿಂತ ಅವರ ಸುಧಾರಣೆಗೆ ಆದ್ಯತೆ ನೀಡಲಾಗುವುದು. ಆದರೆ ಮಾದಕ ವಸ್ತುಗಳನ್ನು ಪೂರೈಸುವ ಪೆಡ್ಲರ್‌ಗಳು ಹಾಗೂ ಸರಬರಾಜು ಜಾಲವನ್ನು ಪತ್ತೆಹಚ್ಚಿ ಧ್ವಂಸಗೊಳಿಸುವುದು ಪೊಲೀಸ್ ಇಲಾಖೆಯ ಪ್ರಮುಖ ಗುರಿಯಾಗಿದೆ ಎಂದು ತಿಳಿಸಿದರು.
2026ನೇ ಸಾಲಿನಲ್ಲಿ ಜಿಲ್ಲೆಯಲ್ಲಿ 249 NDPS ಪ್ರಕರಣಗಳು ದಾಖಲಾಗಿದ್ದು, 290 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಬೆಳೆಯುವ ಯಾವುದೇ ಪ್ರಕರಣ ವರದಿಯಾಗಿಲ್ಲ. ಹೊರರಾಜ್ಯಗಳಿಂದ ಜಿಲ್ಲೆಗೆ ಸಾಗಾಟವಾಗುವ ಮಾದಕ ವಸ್ತುಗಳ ಮೇಲೂ ತೀವ್ರ ನಿಗಾ ವಹಿಸಲಾಗಿದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪರಮೇಶ್ವರ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ್, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ. ಮುರಳಿಧರ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ್ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.ದಾವಣಗೆರೆ