ಕಿತ್ತೂರು ಉತ್ಸವ-2026ರ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ.
. ಈ ಸಲದ ಉತ್ಸವವನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಾಧಕರಿಂದ ಉದ್ಘಾಟಿಸಲು ನಿರ್ಧರಿಸಲಾಗಿದ್ದು, ಸೂಕ್ತ ಸಾಧಕರನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಕಿತ್ತೂರು ಉತ್ಸವ-2026ರ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಸಚಿವ ಸತೀಶ್ ಜಾರಕಿಹೊಳಿ.
ವಿಜಯ್ ಪ್ರಭಾಸ್ ನ್ಯೂಸ್ ಬೆಳಗಾವಿ: ಕಿತ್ತೂರು ಉತ್ಸವವನ್ನು ಅತ್ಯಂತ ವಿಜೃಂಭಣೆ ಹಾಗೂ ಯಶಸ್ವಿಯಾಗಿ ಆಚರಿಸಲು ರಚಿಸಲಾದ ವಿವಿಧ 18 ಉಪ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಈ ಐತಿಹಾಸಿಕ ಕಾರ್ಯಕ್ರಮದ ಯಶಸ್ಸಿಗೆ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಅಗತ್ಯ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.
ಕಿತ್ತೂರಿನ ವೀರರಾಣಿ ಕಿತ್ತೂರು ಚನ್ನಮ್ಮ ಸಭಾಭವನದಲ್ಲಿ ಜರುಗಿದ ‘ಚನ್ನಮ್ಮ ಉತ್ಸವ-2026’ ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಬಾರಿಯ ಉತ್ಸವದಲ್ಲಾದ ಲೋಪದೋಷಗಳನ್ನು ಸರಿಪಡಿಸಿ, ಈ ಬಾರಿ ಅತ್ಯಂತ ಅದ್ದೂರಿಯಾಗಿ ಉತ್ಸವವನ್ನು ಆಚರಿಸಲಾಗುವುದು. ಈ ಸಲದ ಉತ್ಸವವನ್ನು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸಾಧಕರಿಂದ ಉದ್ಘಾಟಿಸಲು ನಿರ್ಧರಿಸಲಾಗಿದ್ದು, ಸೂಕ್ತ ಸಾಧಕರನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಉತ್ಸವದ ಪ್ರಮುಖ ಮುಖ್ಯಾಂಶಗಳು ಹಾಗೂ ನಿರ್ಧಾರಗಳು:
ಜಾನುವಾರು ಜಾತ್ರೆ ಹಾಗೂ ಫಲಪುಷ್ಪ ಪ್ರದರ್ಶನ: ಈ ಬಾರಿಯ ಉತ್ಸವದಲ್ಲಿ ವಿಶೇಷ ಆಕರ್ಷಣೆಯಾಗಿ ಜಾನುವಾರು ಜಾತ್ರೆ ಹಾಗೂ ಫಲಪುಷ್ಪ ಅಲಂಕಾರಕ್ಕೆ ಹೆಚ್ಚಿನ ಒತ್ತು ನೀಡಲು ಸಂಬಂಧಿಸಿದ ಇಲಾಖೆಗಳಿಗೆ ಸೂಚಿಸಲಾಗಿದೆ.
ಸ್ಥಳೀಯ ಕಲಾವಿದರಿಗೆ ಆದ್ಯತೆ: ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ನೀಡಲಾಗುವುದು. ವೀರಜ್ಯೋತಿ ಮತ್ತು ಮೆರವಣಿಗೆಯನ್ನು ನಿಗದಿತ ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು.
ಕಾಕತಿ ಉತ್ಸವ ಹಾಗೂ ಇತಿಹಾಸ ಅಧ್ಯಯನ: ರಾಣಿ ಚನ್ನಮ್ಮಾಜಿಯ ಜನ್ಮಸ್ಥಳವಾದ ಕಾಕತಿಗೂ ಕಿತ್ತೂರಿನಷ್ಟೇ ಆದ್ಯತೆ ನೀಡಲಾಗುತ್ತಿದ್ದು, ಅಲ್ಲೂ ಸಣ್ಣ ಪ್ರಮಾಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಕಿತ್ತೂರಿನ ಇತಿಹಾಸದ ಹೆಚ್ಚಿನ ಅಧ್ಯಯನಕ್ಕೆ ಕ್ರಮ ವಹಿಸಲಾಗುವುದು.
ರೂ. 30 ಕೋಟಿ ವೆಚ್ಚದ ಥೀಮ್ ಪಾರ್ಕ್: ಕಿತ್ತೂರಿನಲ್ಲಿ 30 ಕೋಟಿ ರೂಪಾಯಿ ಅನುದಾನದಲ್ಲಿ ಬೃಹತ್ ಥೀಮ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ ಸಿದ್ಧಪಡಿಸಲಾಗುತ್ತಿದೆ.
ಮಕ್ಕಳಿಗಾಗಿ ವಿಜ್ಞಾನ ಮೇಳ: ಉತ್ಸವದ ಸಂದರ್ಭದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗಾಗಿ ವಿಜ್ಞಾನ ಮೇಳ ಹಾಗೂ ವಿಚಾರ ಸಂಕಿರಣಗಳನ್ನು ಆಯೋಜಿಸಲಾಗುವುದು.
ಸಭೆಯಲ್ಲಿದ್ದ ರಾಜಗುರು ಕಲ್ಮಠದ ಶ್ರೀ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿಯ ಶ್ರೀ ಪಂಚಾಕ್ಷರಿ ಮಡಿವಾಳ ಸ್ವಾಮೀಜಿ ಹಾಗೂ ದೇಗುಳಹಳ್ಳಿ ಮಡಿವಾಳ ಮಠದ ಶ್ರೀ ವಿರೇಶ್ವರ ಸ್ವಾಮೀಜಿ ಅವರು ರೈತರಿಗಾಗಿ ಪ್ರತ್ಯೇಕ ವೇದಿಕೆ ಕಲ್ಪಿಸಲು ಮತ್ತು ದಸರಾ ಅಂಬಾರಿ ಮಾದರಿಯಲ್ಲಿ ಚನ್ನಮ್ಮನ ಬೆಳ್ಳಿ ಮೂರ್ತಿಯ ಮೆರವಣಿಗೆ ನಡೆಸಲು ಉಪಯುಕ್ತ ಸಲಹೆಗಳನ್ನು ನೀಡಿದರು.
ಶಾಸಕ ಬಾಬಾಸಾಹೇಬ ಪಾಟೀಲ ಅವರು ಮಾತನಾಡಿ, ಸಾರ್ವಜನಿಕರು ನೀಡಿದ ಎಲ್ಲಾ ಸಲಹೆಗಳನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಹಾಗೂ ಅನುದಾನದ ದುರುಪಯೋಗವಾಗದಂತೆ ಅದ್ದೂರಿ ಉತ್ಸವ ಆಯೋಜಿಸಲಾಗುವುದು ಎಂದರು. ಉಪವಿಭಾಗಾಧಿಕಾರಿ ಪ್ರವೀಣ ಜೈನ್ ಅವರು ಉತ್ಸವದ ವ್ಯವಸ್ಥಿತ ನಿರ್ವಹಣೆಗಾಗಿ ವಿಜಯ ಜ್ಯೋತಿ, ಶಿಷ್ಟಾಚಾರ, ಸಾಂಸ್ಕೃತಿಕ, ಕಾನೂನು ಸುವ್ಯವಸ್ಥೆ ಸೇರಿದಂತೆ ಒಟ್ಟು 18 ಉಪ ಸಮಿತಿಗಳನ್ನು ರಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಾರ್ವಜನಿಕರ ಪ್ರಮುಖ ಸಲಹೆಗಳು:
ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರು ಉತ್ಸವದ ಸಿದ್ಧತೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು, ಟೆಂಡರ್ ಪ್ರಕ್ರಿಯೆ ಪಾರದರ್ಶಕವಾಗಿರಬೇಕು, ಸಾರಿಗೆ ಸಂಸ್ಥೆಯಿಂದ ಹೆಚ್ಚಿನ ಬಸ್ ವ್ಯವಸ್ಥೆ ಕಲ್ಪಿಸಬೇಕು, ಉಪನ್ಯಾಸಕರಿಗೆ ಗೌರವಧನ ವಿಳಂಬ ಮಾಡಬಾರದು, ದುಂದುವೆಚ್ಚಕ್ಕೆ ಕಡಿವಾಣ ಹಾಕಬೇಕು ಮತ್ತು ಕಿತ್ತೂರು ಸಂಸ್ಥಾನಕ್ಕೆ ಸಂಬಂಧಿಸಿದ ಐತಿಹಾಸಿಕ ದಾಖಲೆಗಳನ್ನು ಸಂರಕ್ಷಿಸಬೇಕು ಎಂದು ಪ್ರಮುಖ ಬೇಡಿಕೆಗಳನ್ನು ಸಚಿವರ ಮುಂದಿಟ್ಟರು.
ಈ ಸಭೆಯಲ್ಲಿ ವಾ.ಕ.ರ.ಸಾರಿಗೆ ಸಂಸ್ಥೆ ಉಪಾಧ್ಯಕ್ಷರಾದ ಸುನೀಲ ಹನುಮಣ್ಣವರ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್.ಕೆ, ಜಿಲ್ಲಾ ಪಂಚಾಯತ್ ಸಿಇಒ ರಾಹುಲ್ ಶಿಂಧೆ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಸಂತೋಷ ಹಾನಗಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.